ಸುರತ್ಕಲ್ ಹೆದ್ದಾರಿ ಸರ್ವಿಸ್ ರಸ್ತೆ ಅವ್ಯವಸ್ಥೆಯಿಂದ ನಿತ್ಯ ಅಪಘಾತ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಬಾವಾ!

ಸುರತ್ಕಲ್: ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಕಾಮಗಾರಿ ಗಾಗಿ ರಸ್ತೆ ಅಗೆದು ಹಾಕಲಾಗಿದ್ದು, ಗುಂಡಿಯಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದ್ದು, ನಿತ್ಯ ಅಪಘಾತಗಳಿಗೆ ಕಾರಣವಾಗುತ್ತಿದೆ. ವಾಹನ ಸಂಚಾರ ದಟ್ಟವಾಗಿರುವ ಈ ಭಾಗದಲ್ಲಿ ರಸ್ತೆಯ ಮಧ್ಯದಲ್ಲೇ ನಿರ್ಮಾಣವಾದ ಆಳವಾದ ಗುಂಡಿ ಚಾಲಕರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ವಿಶೇಷವಾಗಿ ಬೈಕ್ ಸವಾರರು ಹಾಗೂ ಸಣ್ಣ ವಾಹನಗಳು ಈ ಗುಂಡಿಯನ್ನು ತಪ್ಪಿಸಲು ಯತ್ನಿಸುವ ವೇಳೆ ನಿಯಂತ್ರಣ ಕಳೆದುಕೊಂಡು ಬಿದ್ದು ಗಾಯಗೊಳ್ಳುವ ಘಟನೆಗಳು ಹೆಚ್ಚುತ್ತಿರುವುದಾಗಿ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ರಾತ್ರಿ ವೇಳೆಯಲ್ಲಿ ಈ ಸಮಸ್ಯೆ ಮತ್ತಷ್ಟು ಗಂಭೀರವಾಗುತ್ತಿದ್ದು, ಸಮರ್ಪಕ ಬೆಳಕು ಇಲ್ಲದ ಕಾರಣ ಅಪಘಾತಗಳ ಸಂಭವ ಹೆಚ್ಚುತ್ತಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಮಾಜಿ ಶಾಸಕ ಮೊಯಿದೀನ್ ಬಾವಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಸ್ತೆ ದುರವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. “ಜನರ ಸುರಕ್ಷತೆ ಮುಖ್ಯ. ತಾತ್ಕಾಲಿಕವಾಗಿ ಮಣ್ಣು ಹಾಕಿ ಮುಚ್ಚುವ ಬದಲು ಶಾಶ್ವತ ಪರಿಹಾರ ಕಲ್ಪಿಸಬೇಕು. ಗುಂಡಿಯನ್ನು ಸರಿಯಾಗಿ ದುರಸ್ತಿ ಮಾಡಿ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಮಾಡಬೇಕು” ಎಂದು ಸೂಚಿಸಿದರು. ಸ್ಥಳೀಯ ನಿವಾಸಿಗಳು ಹಲವು ಬಾರಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

error: Content is protected !!