ನವದೆಹಲಿ: ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಪಡೆದಿರುವ ಜನಾದೇಶದ ಕುರಿತು ತೀವ್ರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ಗೆಲುವು ಭಾರತೀಯ ಪ್ರಜಾಪ್ರಭುತ್ವವನ್ನು ನಾಶಪಡಿಸಲು ಬಿಜೆಪಿ ಇಟ್ಟಿರುವ ಹೆಜ್ಜೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ರಾಜಕೀಯ ನಕಾಶೆಯಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದ್ದು, ಹಲವು ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಮೈತ್ರಿಕೂಟಗಳು ಮತ್ತು ಪಕ್ಷಗಳು ಅಧಿಕಾರ ಕಳೆದುಕೊಂಡಿವೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಅನ್ನು ಅಧಿಕಾರದಿಂದ ಕೆಳಗಿಳಿಸಿ ಬಿಜೆಪಿ ಐತಿಹಾಸಿಕ ಮುನ್ನಡೆ ಸಾಧಿಸಿದೆ. ಅಸ್ಸಾಂನಲ್ಲೂ ಬಿಜೆಪಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

ಈ ಫಲಿತಾಂಶಗಳ ಕುರಿತು ಮಾತನಾಡಿದ ರಾಹುಲ್ ಗಾಂಧಿ, ಅಸ್ಸಾಂ ಮತ್ತು ಬಂಗಾಳದಲ್ಲಿ ಬಿಜೆಪಿಗೆ ಸಿಕ್ಕಿರುವ ಬೆಂಬಲವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಾಶಪಡಿಸುವ ದಿಕ್ಕಿನಲ್ಲಿ ಸಾಗುವ ಆತಂಕಕಾರಿ ಬೆಳವಣಿಗೆ ಎಂದು ಎಚ್ಚರಿಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಸಾಂವಿಧಾನಿಕ ಮೌಲ್ಯಗಳ ಮೇಲೆ ಪರಿಣಾಮ ಬೀರಬಹುದು ಎಂದು ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇತರ ರಾಜ್ಯಗಳ ಸ್ಥಿತಿಗತಿ:
ಇದೇ ವೇಳೆ ತಮಿಳುನಾಡಿನಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ ಟಿವಿ ಕೆ (TVK) ಪಕ್ಷವು ಭರ್ಜರಿ ಜಯ ದಾಖಲಿಸುವ ಮೂಲಕ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿದೆ. ಕೇರಳದಲ್ಲಿ ಎಡರಂಗದ ಸುದೀರ್ಘ ಆಳ್ವಿಕೆಗೆ ಬ್ರೇಕ್ ಬಿದ್ದಿದ್ದು, ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಮೈತ್ರಿಕೂಟ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ.
