ಡಿಜಿಪಿ ಕೆ. ರಾಮಚಂದ್ರ ರಾವ್ ಅಮಾನತು ಆದೇಶ ಹಿಂಪಡೆದ ಸರ್ಕಾರ!

ಬೆಂಗಳೂರು: ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಡಿಜಿಪಿ ಕೆ. ರಾಮಚಂದ್ರ ರಾವ್ ಅವರನ್ನು ಕರ್ನಾಟಕ ಸರ್ಕಾರ ಮತ್ತೆ ಸೇವೆಗೆ ಮರುಸೇರ್ಪಡೆಗೊಳಿಸಿದೆ. ಬುಧವಾರ ಸರ್ಕಾರ ಹೊರಡಿಸಿದ ಆದೇಶದಂತೆ, ಅವರ ಅಮಾನತು ಆದೇಶವನ್ನು ರದ್ದುಗೊಳಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಗೆ ನೇಮಕ ಮಾಡಲಾಗಿದೆ.

ಅಧಿಕೃತ ಆದೇಶದ ಪ್ರಕಾರ, 1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ಅವರನ್ನು ಮುಂದಿನ ಆದೇಶದವರೆಗೆ ಪೊಲೀಸ್ ಮಹಾನಿರ್ದೇಶಕರಾಗಿ (ಪೊಲೀಸ್ ಕೈಪಿಡಿ) ನೇಮಕ ಮಾಡಲಾಗಿದೆ. ಈ ಹುದ್ದೆಯನ್ನು ಸಿಐಡಿ ಡಿಜಿಪಿ ಹುದ್ದೆಗೆ ಸಮಾನವೆಂದು ಪರಿಗಣಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಬಿ.ಎಸ್. ಸಂಜಯ್ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

ಮೂಲಗಳ ಪ್ರಕಾರ, ಕೆ. ರಾಮಚಂದ್ರ ರಾವ್ ಅವರು ಇದೇ ಮೇ 31ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ. ಜನವರಿ 19ರಂದು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ತಮ್ಮ ಕಚೇರಿಯಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಅವರ ವಿರುದ್ಧ ಕೇಳಿಬಂದಿತ್ತು. ಈ ಆರೋಪ ಗಂಭೀರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅವರನ್ನು ಅಮಾನತುಗೊಳಿಸಿ ಇಲಾಖಾತ್ಮಕ ತನಿಖೆಗೆ ಆದೇಶಿಸಿತ್ತು. ಆಕ್ಷೇಪಾರ್ಹ ವೀಡಿಯೊಗಳು ಸುದ್ದಿ ವಾಹಿನಿಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದವು.

error: Content is protected !!