ತಲೆಮರೆಸಿಕೊಂಡಿದ್ದ ಮತೀಯ ಗಲಭೆ, ದರೋಡೆ ಸಂಚು ಪ್ರಕರಣದ ಆರೋಪಿ ಬಂಧನ

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮತೀಯ ಗಲಭೆ, ದರೋಡೆ ಸಂಚು ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ 2021 ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರಿನ ಕೂಳೂರು ಸಮೀಪದ ರಾಯಿಕಟ್ಟೆ ನಿವಾಸಿ ಬಿಜು ಅಲಿಯಾಸ್ ವಿಜಯ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಕಾವೂರು ಮತ್ತು ಉರ್ವ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯವು ಜಾಮೂನು ರಹಿತ ವಾರಂಟ್ (NBW) ಜಾರಿ ಮಾಡಿತ್ತು.

ಬಂಧಿತ ಆರೋಪಿ ವಿಜಯ್ ಅಲಿಯಾಸ್ ಬಿಜು ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು ಐದು ಪ್ರಮುಖ ಪ್ರಕರಣಗಳು ದಾಖಲಾಗಿವೆ. ಈತ ಕಾವೂರು ಮತ್ತು ಉರ್ವ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಮತೀಯ ಗಲಭೆ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಪ್ರಕರಣಗಳಲ್ಲಿ (ಕಲಂ 295A, 153A, 505 IPC) ಪ್ರಮುಖ ಆರೋಪಿಯಾಗಿದ್ದಾನೆ. ಇದರ ಜೊತೆಗೆ, ಪಣಂಬೂರು ಪೊಲೀಸ್ ಠಾಣೆಯಲ್ಲಿ ದರೋಡೆಗೆ ಸಂಚು ರೂಪಿಸಿದ ಮತ್ತು ಅಕ್ರಮವಾಗಿ ಮಾರಕಾಸ್ತ್ರಗಳನ್ನು ಹೊಂದಿದ್ದ ಆರೋಪದಡಿ ಈತನ ವಿರುದ್ಧ ಆಯುಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಕೇವಲ ಗಲಭೆ ಮತ್ತು ದರೋಡೆ ಮಾತ್ರವಲ್ಲದೆ, ಮಂಗಳೂರು ಉತ್ತರ (ಬಂದರು) ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ಹಾಗೂ ಕಾವೂರು ಠಾಣೆಯಲ್ಲಿ ಮಾದಕ ದ್ರವ್ಯ ನಿರೋಧಕ ಕಾಯ್ದೆಯಡಿ (NDPS) ಈತನ ವಿರುದ್ಧ ಪ್ರಕರಣಗಳು ದಾಖಲಾಗಿದೆ.


ಆರೋಪಿಯು 2021 ರಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದನು. ನ್ಯಾಯಾಲಯದ ಆದೇಶದಂತೆ ಸತತ ಕಾರ್ಯಾಚರಣೆ ನಡೆಸಿದ ಪೊಲೀಸರು ಕೊನೆಗೂ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಬಂಧಿತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಮಂಗಳೂರು ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತಲೆಮರೆಸಿಕೊಂಡಿರುವ ಇಂತಹ ಹಳೆ ಆರೋಪಿಗಳ ಪತ್ತೆಗೆ ನಗರ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ಮುಂದುವರಿದಿದೆ.

error: Content is protected !!