ಉಡುಪಿ: ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸುವ ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಮೂಲಸೌಕರ್ಯ ಒದಗಿಸುವ ಉದ್ದೇಶದಿಂದ, ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಬಿಡುಗಡೆ ಮಾಡಿರುವ ಅನುದಾನದ ಕಾಮಗಾರಿಗಳ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಮಂಗಳವಾರ ಶಾಲೆಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಮಂಜುನಾಥ ಭಂಡಾರಿ ಅವರು ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಎಂಆರ್‌ಪಿಎಲ್ ಸಂಸ್ಥೆಯ ನಿರ್ದೇಶಕರಿಗೆ ಪತ್ರ ಬರೆದು ವಿಶೇಷ ಅನುದಾನ ನೀಡುವಂತೆ ಮನವಿ ಮಾಡಿದ್ದರು. ಶಾಸಕರ ಈ ಶಿಫಾರಸ್ಸನ್ನು ಪುರಸ್ಕರಿಸಿದ ಸಂಸ್ಥೆಯು ತನ್ನ ಸಿ.ಎಸ್.ಆರ್. ನಿಧಿಯಡಿ ಜಿಲ್ಲೆಯ ಆರು ಪ್ರಮುಖ ಶಿಕ್ಷಣ ಸಂಸ್ಥೆಗಳಿಗೆ ಕೋಟ್ಯಂತರ ರೂಪಾಯಿ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಮೇ 12ರಂದು ಕುಂದಾಪುರ ತಾಲೂಕಿನ ಬಸ್ರೂರು ಮತ್ತು ಸಿದ್ದಾಪುರ ಸರ್ಕಾರಿ ಪ್ರೌಢ ಶಾಲೆಗಳಿಗೆ ಭೇಟಿ ನೀಡಿದ ಶಾಸಕರು, ಎಂಆರ್‌ಪಿಎಲ್ ಅನುದಾನದ ಅಡಿಯಲ್ಲಿ ನಡೆಯಲಿರುವ ಕಾಮಗಾರಿಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಶಾಲಾ ಆವರಣದಲ್ಲಿ ಹೊಸದಾಗಿ ನಿರ್ಮಾಣವಾಗಲಿರುವ ತರಗತಿ ಕೊಠಡಿಗಳು ಯಾವ ರೀತಿ ಇರಬೇಕು ಮತ್ತು ಅವುಗಳನ್ನು ಮಾದರಿ ಶಾಲಾ ಕೊಠಡಿಗಳನ್ನಾಗಿ’ ಹೇಗೆ ಪರಿವರ್ತಿಸಬೇಕು ಎಂಬ ಬಗ್ಗೆ ಅಧಿಕಾರಿಗಳಿಗೆ ಮತ್ತು ಶಾಲಾ ಮಂಡಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಅತ್ಯಾಧುನಿಕ ಮೂಲಸೌಕರ್ಯ ಒದಗಿಸುವುದು ಇಂದಿನ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟ ಶಾಸಕರು, ಈ ನಿಟ್ಟಿನಲ್ಲಿ ಎಂಆರ್‌ಪಿಎಲ್ ನೀಡಿದ ಅನುದಾನವನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.