ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ: ಹತ್ತು ದಿನಗಳ ರಾಜಕೀಯ ಕುತೂಹಲಕ್ಕೆ ತೆರೆ

ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಭರ್ಜರಿ ಜಯ ದಾಖಲಿಸಿದ ಹತ್ತು ದಿನಗಳ ನಂತರ, ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರ ಹೆಸರನ್ನು ಎಐಸಿಸಿ ಅಧಿಕೃತವಾಗಿ ಘೋಷಿಸಿದೆ. ಸಿಎಂ ಸ್ಥಾನಕ್ಕಾಗಿ ಕೆ.ಸಿ. ವೇಣುಗೋಪಾಲ್ ಮತ್ತು ರಮೇಶ್ ಚೆನ್ನಿತ್ತಲ ಅವರ ಹೆಸರುಗಳು ಬಲವಾಗಿ ಕೇಳಿಬಂದಿದ್ದರೂ, ಅಂತಿಮವಾಗಿ ಹೈಕಮಾಂಡ್ ಸತೀಶನ್ ಅವರ ಹೆಸರನ್ನು ಅಂತಿಮಗೊಳಿಸಿದೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಹಿರಿಯ ನಾಯಕರೊಂದಿಗೆ ನಡೆಸಿದ ಸುದೀರ್ಘ ಸಮಾಲೋಚನೆಯ ನಂತರ ಈ ಮಹತ್ವದ ತೀರ್ಮಾನ ಹೊರಬಿದ್ದಿದೆ.

ಕಳೆದ ಏಪ್ರಿಲ್ 9ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ ಮೈತ್ರಿಕೂಟವು ಒಟ್ಟು 140 ಸ್ಥಾನಗಳ ಪೈಕಿ 102 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆಡಳಿತಾರೂಢ ಎಲ್​​ಡಿಎಫ್ ಕೇವಲ 35 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವ ಮೂಲಕ ಅಧಿಕಾರ ಕಳೆದುಕೊಂಡಿದೆ. ಫಲಿತಾಂಶ ಮೇ 4ರಂದೇ ಪ್ರಕಟವಾಗಿದ್ದರೂ, ನಾಯಕತ್ವದ ಆಯ್ಕೆಗಾಗಿ ಕಾಂಗ್ರೆಸ್ ವಲಯದಲ್ಲಿ ಸಾಕಷ್ಟು ಚರ್ಚೆಗಳು ನಡೆದ ಕಾರಣ ಘೋಷಣೆಯು ಹತ್ತು ದಿನಗಳ ಕಾಲ ವಿಳಂಬವಾಯಿತು.

ಎಐಸಿಸಿ ಕೇರಳ ಉಸ್ತುವಾರಿ ದೀಪಾ ದಾಸ್ಮುನ್ಸಿ ಹಾಗೂ ಕೇಂದ್ರ ವೀಕ್ಷಕರಾದ ಅಜಯ್ ಮಾಕನ್ ಮತ್ತು ಮುಕುಲ್ ವಾಸ್ನಿಕ್ ಅವರು ಸುದ್ದಿಗೋಷ್ಠಿಯಲ್ಲಿ ಸತೀಶನ್ ಅವರ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರು ವೀಕ್ಷಕರಿಂದ ರಾಜ್ಯ ನಾಯಕರ ಅಭಿಪ್ರಾಯಗಳನ್ನು ಪಡೆದು ಅಂತಿಮ ಮೊಹರು ಒತ್ತಿದ್ದಾರೆ.

ವಿ.ಡಿ. ಸತೀಶನ್ ಅವರ ಆಯ್ಕೆಯ ಸುದ್ದಿ ಹೊರಬೀಳುತ್ತಿದ್ದಂತೆಯೇ ತಿರುವನಂತಪುರಂನಲ್ಲಿರುವ ಕಾಂಗ್ರೆಸ್ ಕಚೇರಿಯ ಮುಂದೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಕೇರಳ ಕಾಂಗ್ರೆಸ್ ಅಧ್ಯಕ್ಷ ಸನ್ನಿ ಜೋಸೆಫ್ ಅವರು ಈ ನಿರ್ಧಾರವನ್ನು ಮುಕ್ತವಾಗಿ ಸ್ವಾಗತಿಸಿದ್ದು, ಇದು ಪಕ್ಷದ ಹಿತದೃಷ್ಟಿಯಿಂದ ಅತ್ಯಂತ ಸಮರ್ಪಕವಾದ ನಿರ್ಧಾರ ಎಂದು ತಿಳಿಸಿದ್ದಾರೆ.

error: Content is protected !!