
ವಿಜಯಪುರ: ಭಾರಿ ಗಾಳಿ-ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಜಿಲ್ಲೆಯ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಗುರುವಾರ(ಮೇ 14) ನಡೆದಿದೆ.

ಗುರುನಾಥ ಬಡಿಗೇರ (35), ಅವರ ಪತ್ನಿ ಜ್ಯೋತಿ ಬಡಿಗೇರ (28), ಪುತ್ರಿಯರಾದ ಕಾಳಮ್ಮ ಬಡಿಗೇರ (13) ಮತ್ತು ಕೀರ್ತಿ ಬಡಿಗೇರ (9) ಮೃತರು.

ಗುರುನಾಥ್ ಅವರು ತಮ್ಮ ಸ್ವಂತ ಮನೆಯನ್ನು ದುರಸ್ತಿ ಮಾಡಿಸುತ್ತಿದ್ದ ಹಿನ್ನೆಲೆ ಕುಟುಂಬ ಸಮೇತ ಹಳೆಯ ಮನೆಯೊಂದರಲ್ಲಿ ಬಾಡಿಗೆಗೆ ವಾಸವಾಗಿದ್ದರು. ನಿನ್ನೆ ರಾತ್ರಿ ಸುರಿದ ಭಾರೀ ಮಳೆ ಹಾಗೂ ಗಾಳಿಯಿಂದ ಮನೆಯ ಹಳೆಯ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದೆ. ಆ ವೇಳೆ ಮನೆಯೊಳಗೆ ಮಲಗಿದ್ದ ಕುಟುಂಬದ ನಾಲ್ವರು ಅವಶೇಷಗಳ ಅಡಿಯಲ್ಲಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸಿಂದಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅವಶೇಷಗಳ ಅಡಿಯಲ್ಲಿದ್ದ ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಸಲಾಗಿದೆ.