
ಉಡುಪಿ : ಮಂಗಳೂರಿನಿಂದ ಬರುತ್ತಿದ್ದ ಮೀನಿನ ಲಾರಿಯ ಟೈರ್ ಸ್ಫೋಟಗೊಂಡು, ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ಮಂಗಳವಾರ(ಮೇ 26) ಉಡುಪಿ ಅಂಬಾಗಿಲು ಸಮೀಪ ನಡೆದಿದೆ.

ಲಾರಿಯ ಹಿಂಬದಿ ಟೈರ್ ಏಕಾಏಕಿ ಸ್ಫೋಟಗೊಂಡಿದ್ದು, ಇದರಿಂದ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡ ಚಾಲಕ ರಸ್ತೆ ಬದಿಗೆ ಉರುಳಿ ಬಿದ್ದಿದ್ದಾನೆ ಎನ್ನಲಾಗಿದೆ. ಘಟನೆಯ ಪರಿಣಾಮ ಲಾರಿಗೆ ಹಾನಿಯಾಗಿದ್ದು, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಾಹನ ತೆರವು ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದಿಂದ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದ್ದಾರೆ.
