
ಮಂಗಳೂರು: ರಾತ್ರಿ ಬೀಟ್ ಕರ್ತವ್ಯದ ಪೊಲೀಸ್ ಸಿಬ್ಬಂದಿಗಳ ಮೇಲೆ ಸಿಮೆಂಟ್ ಶೀಟ್ ತುಂಡಿನಿಂದ ಹಲ್ಲೆ ನಡೆಸಿ ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬೆಳ್ತಂಗಡಿ ತಾಲೂಕು ಅರಸಿನಮಕ್ಕಿ ಹತ್ಯಡ್ಕ ಗ್ರಾಮದ ನಿವಾಸಿ ಸಚಿನ್ ಕೆ ಆರ್(24), ನೆಲ್ಯಾಡಿ ಮಣ್ಣಗುಂಡಿ ಹೌಸ್ ನಿವಾಸಿ ಚಂದನ್(24) ಎಂದು ಹೆಸರಿಸಲಾಗಿದೆ.
ಘಟನೆಯ ವಿವರ:
ದಿನಾಂಕ 24-05-2026 ರಂದು ನಸುಕಿನ ಜಾವ 2:10ರ ಸುಮಾರಿಗೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ನಾರಾಯಣಗುರು ಸಮುದಾಯ ಭವನ ರಸ್ತೆಯ ಎದುರು ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕೆಂಪು ಬಣ್ಣದ ಎಲೆಕ್ಟ್ರಿಕಲ್ ಸ್ಕೂಟರ್ ನಲ್ಲಿ ಬಂದ ಇಬ್ಬರು ಯುವಕರಲ್ಲಿ, ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಏಕಾಏಕಿ ಸಿಮೆಂಟ್ ಶೀಟ್ ನ ತುಂಡಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ತಲೆಗೆ ಹೊಡೆದು ಹಲ್ಲೆ ನಡೆಸಿದ್ದ ಪರಿಣಾಮವಾಗಿ ಪೊಲೀಸ್ ಸಿಬ್ಬಂದಿಯ ತಲೆಗೆ ಗಾಯ ಉಂಟಾಗಿದ್ದು, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಯತ್ನ ನಡೆಸಿರುವ ಬಗ್ಗೆ, ಮಂಗಳೂರು ಉರ್ವ ಪೊಲೀಸ್ ಠಾಣೆ ಅ.ಕ್ರ 57/2026 ಕಲಂ 121(1),109,132,3(5) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.
ಪ್ರರಕಣವನ್ನು ಭೇದಿಸಿ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಗುರುತಿಸಿ ತನಿಖೆಯಲ್ಲಿ ದೊರಕಿದ ಸಾಕ್ಷ್ಯಾಧಾರ ಮತ್ತು ಖಚಿತ ಮಾಹಿತಿಯ ಆಧಾರದಲ್ಲಿ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳನ್ನು ಕೇರಳ ರಾಜ್ಯದ ಕಾಂಞಿಗಾಡ್ ಪ್ರದೇಶದಲ್ಲಿ ಸಿಸಿಬಿ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದು, ಮುಂದಿನ ಕ್ರಮಕ್ಕಾಗಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಕೃತ್ಯಕ್ಕೆ ಉಪಯೋಗಿಸಿರುವ ಬೈಕ್ ನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ಮಂಗಳೂರಿನ ಅಶೋಕನಗರದ ಫಲ್ಗುಣಿ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆರೋಪಿಗಳ ಪೈಕಿ ಸಚಿನ್ ಕೆ.ಆರ್ ಎಂಬಾತನು ಕುಂಟಿಕಾನದ PON PON Sweets ಪ್ಯಾಕ್ಟರಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಮತ್ತೊಬ್ಬ ಆರೋಪಿ ಚಂದನ್ ಕೂಳೂರಿನ ಅದ್ವೈತ್ ಕಿಯಾ ಶೋ ರೂಮ್ನಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.