
ಲಕ್ನೋ: ಎರಡೂವರೆ ವರ್ಷದ ತನ್ನ ಪುಟ್ಟ ಕಂದಮ್ಮನ ಮೇಲೆ ಹಲ್ಲೆ ನಡೆಸಿ, ರಸ್ತೆ ಬದಿಯ ಚರಂಡಿಗೆ ತಳ್ಳಿ ಕೊಲ್ಲಲು ಯತ್ನಿಸಿದ ತಂದೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮೋನು ಅಲಿಯಾಸ್ ಯೋಗೇಂದ್ರ ಸಿಂಗ್ (50) ಬಂಧಿತ ಆರೋಪಿ.

ಮೇ 30 ರಂದು ಮಧ್ಯಾಹ್ನ 2.30 ರ ಸುಮಾರಿಗೆ ಪಾಪಿ ತಂದೆ ಯೋಗೇಂದ್ರ ಸಿಂಗ್ ಮಗುವನ್ನು ಕಾಲಿನಿಂದ ಒದ್ದು, ಕೈಯಿಂದ ಗುದ್ದಿ, ಪ್ರಾಣಭಯದಿಂದ ಕಿರುಚುತ್ತಿದ್ದ ಮಗುವನ್ನು ಪದೇ ಪದೇ ರಸ್ತೆ ಬದಿಯ ಚರಂಡಿಗೆ ಎಸೆದು, ಮುಳುಗಿಸಿ ಕೊಲ್ಲಲು ಯತ್ನಿಸುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮಗುವಿನ ಕಿರುಚಾಟ ಕೇಳಿ ಓಡಿಬಂದ ಕೆಲವು ಸ್ಥಳೀಯ ನಿವಾಸಿಗಳು ತಕ್ಷಣವೇ ಮಧ್ಯಪ್ರವೇಶಿಸಿ ಆತನ ಕೈಯಿಂದ ಮಗುವನ್ನು ರಕ್ಷಿಸಿದ್ದಾರೆ. ಈ ವೇಳೆ ಆರೋಪಿ ಆಕ್ರಮಣಕಾರಿಯಾಗಿ ವರ್ತಿಸಿ ಹತ್ತಿರದ ಮನೆಯ ಬಾಗಿಲನ್ನು ಬಲವಂತವಾಗಿ ಮುರಿಯಲು ಯತ್ನಿಸಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದ ಎನ್ನಲಾಗಿದೆ.

ವಾಟ್ಸಾಪ್ ಗ್ರೂಪ್‌ಗಳಲ್ಲಿ ಈ ವಿಡಿಯೋ ಹರಿದಾಡುತ್ತಿದ್ದಂತೆ ಸುಲ್ತಾನಪುರ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ವಿಡಿಯೋ ಸಾಕ್ಷ್ಯ ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ಆರೋಪಿ ಯೋಗೇಂದ್ರ ಸಿಂಗ್ ವಿರುದ್ಧ ಕಠಿಣ ಕಾನೂನು ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಜೈಲಿಗಟ್ಟಿದ್ದಾರೆ.
ಬಂಧಿತ ಆರೋಪಿ ಯೋಗೇಂದ್ರ ಸಿಂಗ್ ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.