
ಬೆಂಗಳೂರು: ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ, ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ ಇಂದು ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ಕೋರಮಂಗಲದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ, ರಾಜೀನಾಮೆಯ ಹಿಂದಿನ ಅಸಲಿ ಕಾರಣಗಳನ್ನು ಮುಕ್ತವಾಗಿ ಬಿಚ್ಚಿಟ್ಟಿದ್ದಾರೆ. ಜಲಸಂಪನ್ಮೂಲ ಇಲಾಖೆ ನೀಡಿದ್ದಕ್ಕೆ ಬೇಸರ ಎಂಬ ಒಂದೇ ಕಾರಣಕ್ಕೆ ರಾಜೀನಾಮೆ ನೀಡುತ್ತಿಲ್ಲ. ಈಗಿನ ಮುಖ್ಯಮಂತ್ರಿಗಳು ಹಿಂದೆ ಅವರಾಗಿಯೇ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡುವ ಬಗ್ಗೆ ಭರವಸೆ ನೀಡಿದ್ದರು. ಆದರೆ, ಅದರಂತೆ ನಡೆದುಕೊಂಡಿಲ್ಲ ಎಂದರು.