ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ಪ್ರತಿಯೊಬ್ಬ ಕಾರ್ಯಕರ್ತನಿಗೂ ಒಂದಲ್ಲೊಂದು ದಿನ ಉತ್ತಮ ಅವಕಾಶ ದೊರೆಯುವುದು ಖಚಿತ. ಆದ್ದರಿಂದ ಪಕ್ಷದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಇಂದು ಜೂನ್ 12ರಂದು ಶುಕ್ರವಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಅವರು, ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ತಮ್ಮ ರಾಜಕೀಯ ಪಯಣದಲ್ಲಿ ಕ್ಷೇತ್ರದ ಜನರ ಪ್ರೀತಿ, ವಿಶ್ವಾಸ ಹಾಗೂ ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನ ಮತ್ತು ಬೆಂಬಲ ಮಹತ್ತರ ಪಾತ್ರ ವಹಿಸಿದೆ. ಪಕ್ಷವು ತಾವು ಸಲ್ಲಿಸಿದ ಸೇವೆ ಹಾಗೂ ಜನಪರ ಕಾರ್ಯಗಳನ್ನು ಗುರುತಿಸಿ ಈ ಮಹತ್ವದ ಜವಾಬ್ದಾರಿಯನ್ನು ನೀಡಿದೆ ಎಂದು ಖಾದರ್ ಹೇಳಿದರು.
ಕಾಂಗ್ರೆಸ್ ಪಕ್ಷದ ನಿಜವಾದ ಶಕ್ತಿ ಕಾರ್ಯಕರ್ತರಲ್ಲಿಯೇ ಅಡಗಿದೆ. ಕಾರ್ಯಕರ್ತರು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಪಕ್ಷದ ತತ್ವ, ಸಿದ್ಧಾಂತಗಳು ಹಾಗೂ ಸರ್ಕಾರದ ಜನಪರ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಮೂಲಕ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕೆಂದು ಅವರು ಕರೆ ನೀಡಿದರು.

ಇದೇ ವೇಳೆ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಜೂನ್ 21ರಂದು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿರುವುದನ್ನು ಉಲ್ಲೇಖಿಸಿದ ಖಾದರ್, “ಹರಿಪ್ರಸಾದ್ ಅವರಿಗೆ ಈ ಮಹತ್ವದ ಸ್ಥಾನ ದೊರೆತಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಸಂದ ಗೌರವವಾಗಿದೆ. ಹೀಗಾಗಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು” ಎಂದು ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರಾದ ಮಮತಾ ಗಟ್ಟಿ, ಶಾಲೆಟ್ ಪಿಂಟೊ, ವಿಶ್ವಾಸ್ ಕುಮಾರ್ ದಾಸ್, ಲಾವಣ್ಯ ಬಳ್ಳಾಲ್, ಸದಾಶಿವ ಉಳ್ಳಾಲ್, ಮಾಜಿ ಮೇಯರ್ ಶಶಿಧರ ಹೆಗ್ಡೆ, ಭಾಸ್ಕರ್ ಕೆ., ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್, ಪ್ರಕಾಶ್ ಸಾಲ್ಯಾನ್, ಪದ್ಮನಾಭ ಕೋಟ್ಯಾನ್, ತೌಸೀಫ್ ಉಪ್ಪಿನಂಗಡಿ ಸೇರಿದಂತೆ ಅನೇಕ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ರಝಾಕ್ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು. ಶುಭೋದಯ ಆಳ್ವ ವಂದನಾರ್ಪಣೆ ಸಲ್ಲಿಸಿದರು.
