“ಸಹಕಾರ ಕ್ಷೇತ್ರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ“ -ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್

ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ವಿಶೇಷ ಸಹಕಾರ ಸಪ್ತಾಹ ಉದ್ಘಾಟನೆ

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅ., ಮಂಗಳೂರು ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸಹಕಾರ ಸಚಿವಾಲಯವು ಸ್ಥಾಪನೆಯಾಗಿ 5 ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಹಿನ್ನಲೆಯಲ್ಲಿ ವಿಶೇಷ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಸೋಮವಾರ ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಜರುಗಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಅವರು, “ನಮಗೆ ಪಕ್ಷ ಇಲ್ಲ ನಮ್ಮ ಪಕ್ಷವೇ ಸಹಕಾರಿ ಪಕ್ಷ. ಸಹಕಾರ ಚಳುವಳಿಯಿಂದಲೇ ದೇಶದ ಅಭಿವೃದ್ಧಿ ಎಂಬ ತತ್ವದಲ್ಲಿ ನಂಬಿಕೆ ಇಟ್ಟವರು ನಾವು. ರಾಜ್ಯದಲ್ಲಿ 47000ಕ್ಕೂ ಹೆಚ್ಚು ಸಹಕಾರಿ ಸಂಘಗಳಿವೆ. ವಾಣಿಜ್ಯ ಬ್ಯಾಂಕ್ ಗಳಲ್ಲಿ ಜನಸಾಮಾನ್ಯರನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ ಆದರೆ ಸಹಕಾರಿ ಬ್ಯಾಂಕ್ ಗಳು ಬಡವರಿಗೆ, ಜನಸಾಮಾನ್ಯರಿಗೆ ಮುಕ್ತ ಅವಕಾಶವನ್ನು ಕಲ್ಪಿಸಿವೆ. ಸಹಕಾರ ಕ್ಷೇತ್ರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಲ್ಲರೂ ಒಗ್ಗಟ್ಟಾಗಿ ದೇಶವನ್ನು ಅಭಿವೃದ್ಧಿ ಪಡಿಸೋಣ“ ಎಂದರು.


ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಡಿ. ಕಾಮತ್ ಮಾತಾಡಿ, ”ಸ್ವಾತಂತ್ರ್ಯ ನಂತರದ ದಿನಗಳಲ್ಲಿ ಸಹಕಾರಿ ಚಳುವಳಿಯಿಂದ ಅಭೂತಪೂರ್ವ ಕೊಡುಗೆ ಈ ದೇಶಕ್ಕೆ ಸಿಕ್ಕಿದೆ. 2047ಕ್ಕೆ ಶಕ್ತಿಶಾಲಿ ಭಾರತದ ಕನಸನ್ನು ಪ್ರಧಾನಿಯವರು ಕಂಡಿದ್ದಾರೆ. ಇದಕ್ಕೆ ಪೂರಕವಾಗಿ ಕೇಂದ್ರ ಸಹಕಾರ ಸಚಿವಾಲಯ ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ. ನಮ್ಮ ಜಿಲ್ಲೆಯಲ್ಲಿ ಎಂ.ಎನ್.ರಾಜೇಂದ್ರ ಕುಮಾರ್ ಅವರಿಂದ ಸಹಕಾರಿ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಯನ್ನು ಕಂಡಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದಲ್ಲಿ ಮಹಿಳೆಯರನ್ನು ಮುಖ್ಯವಾಹಿನಿಗೆ ತರುವಲ್ಲಿ ಸಹಕಾರಿ ಸಂಘಗಳ ಪಾತ್ರ ಮಹತ್ವದ್ದಾಗಿದೆ. ಮಹಿಳೆಯರು ಇನ್ನು ಮುಂದಕ್ಕೂ ಇಂತಹ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಈ ಮೂಲಕ ದೇಶದಲ್ಲಿ ಬಲುದೊಡ್ಡ ಕ್ರಾಂತಿಯಾಗಲಿದೆ“ ಎಂದರು.

ವೇದಿಕೆಯಲ್ಲಿ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಜಯಕರ ಶೆಟ್ಟಿ ಬಿ. ಇಂದ್ರಾಳಿ, ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್.ಎನ್. ರಮೇಶ್, ದೇವಿಪ್ರಸಾದ್ ಶೆಟ್ಟಿ ಬೆಳಪು, ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ವಿ.ಹಿರೇಮಠ್, ಬ್ಯಾಂಕ್ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ಬ್ಯಾಂಕ್ ಸಿಇಒ ಗೋಪಾಲಕೃಷ್ಣ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಶರತ್ ದೇವರನ್ನು ಸ್ತುತಿಸಿದರು.

ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಪ್ರಾಸ್ತಾವಿಕ ಮಾತನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು.

error: Content is protected !!