
ಮಂಗಳೂರು : ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ ಡಿಪಿಐ ಮುಖಂಡ ಮುಹಮ್ಮದ್ ರಿಯಾಜ್ ಫರಂಗಿಪೇಟೆಗೆ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
23-07-2015 ರಂದು ಬೆಳ್ತಂಗಡಿ ತಾಲೂಕು ಕಚೇರಿ ಬಳಿ ‘ಪಾಪುಲರ್ ಫ್ರಂಟ್ ಆಫ್ ಇಂಡಿಯಾ’ (PFI) ಬೆಳ್ತಂಗಡಿ ವಲಯ ಸಂಘಟನೆಯ ವತಿಯಿಂದ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಮಹಮ್ಮದ್ ರಿಯಾಜ್ ಫರಂಗಿಪೇಟೆ ಧಾರ್ಮಿಕ ಭಾವನೆಗೆ ಧಕ್ಕೆಯುಂಟುಮಾಡುವ ರೀತಿಯಲ್ಲಿ ಉದ್ರೇಕಕಾರಿ ಹಾಗೂ ಪ್ರಚೋದನಾಕಾರಿ ಭಾಷಣ ಮಾಡಿದ್ದ ಆರೋಪ ಎದುರಿಸಿದ್ದರು.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 315/2015 ರಂತೆ, ಭಾರತೀಯ ದಂಡ ಸಂಹಿತೆ (IPC) ಕಲಂ 153(A) ಮತ್ತು 295(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಅಂದಿನ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ತನಿಖಾಧಿಕಾರಿಯಾಗಿದ್ದ ರವಿ ಬಿ.ಎಸ್. ಅವರು ಪ್ರಕರಣದ ಕಂಪ್ಲೀಟ್ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸುದೀರ್ಘ ವಿಚಾರಣೆ ನಡೆದು, ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ರಾಮಲಿಂಗಪ್ಪ ಅವರು ಆರೋಪಿಗೆ 6 ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಆಶೀತಾ ಅವರು ವಾದ ಮಂಡಿಸಿದ್ದರು.