
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕೊಂಡಗಾಯಿ ನಿವಾಸಿ ಉಮೇಶ್ (53) ಬಂಧಿತ ಆರೋಪಿ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
2026ರ ಆಗಸ್ಟ್ 15ರಂದು ಅಪ್ರಾಪ್ತ ಬಾಲಕನೊಬ್ಬ ಅಳಿಕೆಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ಹತ್ತಿದ ಉಮೇಶ್ ಬಾಲಕನ ಪಕ್ಕದಲ್ಲಿ ಕುಳಿತು ಪ್ರಯಾಣಿಸಿದ್ದಾನೆ. ಈ ವೇಳೆ ಬಾಲಕನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಳಿಕ ಬಾಲಕ ಮನೆಗೆ ತೆರಳಿದಾಗ ಉಮೇಶ್ ಬಾಲಕನ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಕುರಿತು ನೀಡಲಾದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 179/2026ರಂತೆ ಪ್ರಕರಣ ದಾಖಲಾಗಿದೆ. ಪೋಕ್ಸೋ ಕಾಯ್ದೆ 2012ರ ಕಲಂ 4(2) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 351(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಪ್ರಕರಣದ ತನಿಖೆ ನಡೆಸಿದ ವಿಟ್ಲ ಠಾಣಾ ಪೊಲೀಸರು ಆರೋಪಿತ ಉಮೇಶ್‌ನನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.