
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಅವೈಜ್ಞಾನಿಕವಾಗಿ ಸೇರ್ಪಡೆಗೊಂಡಿರುವ ಸುಮಾರು 55 ಚದರ ಕಿಲೋಮೀಟರ್ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಡುವಂತೆ ಆಗ್ರಹಿಸಿ ದೀಪಕ್ ಕುಮಾರ್ ಶೆಟ್ಟಿ, ಅರುಣ್ ಕುಮಾರ್ ಹಾಗೂ ವೀರಭದ್ರ ಗಾಣಿಗ ಅವರು ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಹೆಬ್ರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನವಿ ಸಲ್ಲಿಸಿದ್ದರು.
ಈ ಮನವಿಯನ್ನು ಪರಿಗಣಿಸಿದ ಮುಖ್ಯಮಂತ್ರಿಯವರು ಈ ಕುರಿತು ಶಾಸಕರಾದ ಮಂಜುನಾಥ ಭಂಡಾರಿ ಅವರೊಂದಿಗೆ ಚರ್ಚಿಸಿ, ಸಂಬಂಧಪಟ್ಟ ಇಲಾಖೆಯ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಬುಧವಾರ ಮಂಜುನಾಥ ಭಂಡಾರಿ ಅವರು ಪೌರಾಡಳಿತ ಸಚಿವರಾದ ಹೆಚ್.ಸಿ. ಬಾಲಕೃಷ್ಣ, ಮಾಜಿ ಪೌರಾಡಳಿತ ಸಚಿವರಾದ ರಹೀಂ ಖಾನ್ ಹಾಗೂ ಪೌರಾಡಳಿತ ಇಲಾಖೆಯ ಕಾರ್ಯದರ್ಶಿ ಕಾವೇರಿ ಅವರನ್ನು ಭೇಟಿ ಮಾಡಿ ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಅವೈಜ್ಞಾನಿಕವಾಗಿ ಸೇರ್ಪಡೆಗೊಂಡಿರುವ ಗ್ರಾಮೀಣ ಪ್ರದೇಶಗಳ ಸಮಸ್ಯೆ ಹಾಗೂ ಇದರಿಂದ ಸ್ಥಳೀಯರಿಗೆ ಉಂಟಾಗುತ್ತಿರುವ ತೊಂದರೆಗಳ ಕುರಿತು ಸವಿಸ್ತಾರವಾಗಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಸಚಿವರು ಸಮಸ್ಯೆಯ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿ, ಮುಂದಿನ ದಿನಗಳಲ್ಲಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯರ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.