ಅ.24: ಮಂಜೇಶ್ವರದಲ್ಲಿ ‘ಪುವೆಂಪು ನೆನಪು’, ಬರಗೂರು ರಾಮಚಂದ್ರಪ್ಪ ಅವರಿಗೆ “ಪುವೆಂಪು ಪ್ರಶಸ್ತಿ“

ಮಂಗಳೂರು: ಬಹುಭಾಷಾ ಪಂಡಿತ, ಸಂಶೋಧಕ, ತುಳುರತ್ನ ಡಾ. ಪಿ. ವೆಂಕಟರಾಜ ಪುಣಿಂಚತ್ತಾಯರ ಸಂಸ್ಮರಣೆ, ಪ್ರಶಸ್ತಿ ಪ್ರದಾನ, ಸಾಂಸ್ಕೃತಿಕ ವೈವಿಧ್ಯ ಇದೇ ತಿಂಗಳ 24ರಂದು ಮಂಜೇಶ್ವರದಲ್ಲಿ ಜರಗಲಿದೆ. ಕರ್ನಾಟಕ ಸರ್ಕಾರದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಪುವೆಂಪು ಪ್ರತಿಷ್ಠಾನ, ಕಾಸರಗೋಡು, ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಮಂಜೇಶ್ವರ ಗಿಳಿವಿಂಡುವಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಆಯೋಜಕರು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.


ಬೆಳಿಗ್ಗೆ 10 ಗಂಟೆಗೆ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಅಧ್ಯಕ್ಷತೆಯಲ್ಲಿ ಕರ್ನಾಟಕ ವಿಧಾನ ಪರಿಷತ್ತು ಸಭಾಪತಿ ಸಲೀಂ ಅಹಮ್ಮದ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಹಿರಿಯ ಸಾಹಿತಿ, ಚಿಂತಕ ಡಾ. ಬರಗೂರು ರಾಮಚಂದ್ರಪ್ಪನವರಿಗೆ 2026ನೇ ಸಾಲಿನ ಪುವೆಂಪು ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೆ. ಎಚ್. ಮುನಿಯಪ್ಪ ಪ್ರಶಸ್ತಿ ಪ್ರದಾನ ಮಾಡುವರು. ಎಂ. ಶಾಫಿ ಬಂಡಸಾಲ ಅವರ ಕವನ ಸಂಕಲನ ‘ಹೃದಯಗೀತೆ’ ಕೃತಿಯನ್ನು ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಾ. ಎಂ. ವೀರಪ್ಪ ಮೊಯ್ಲಿ ಬಿಡುಗಡೆಗೊಳಿಸುವರು. ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸುವರು ಎಂದರು.


ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆ ಇರ್ಫಾನ ಇಕ್ಬಾಲ್, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ, ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಒಕ್ಕೂಟದ ಸಂಸ್ಥಾಪಕ ಅಶೋಕ ಚಂದರಗಿ, ಹಿರಿಯ ಸಾಹಿತಿ ಕೆ. ರಮಾನಂದ ಬನಾರಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಕನ್ನಡ ಸಾಹಿತ್ಯ ಪರಿಷತ್ತಿನ ಕೇರಳ ಗಡಿನಾಡು ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ್ ತೊಟ್ಟೆತ್ತೋಡಿ, ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಎನ್. ಚನಿಯಪ್ಪ ನಾಯ್ಕ, ಕರ್ನಾಟಕ ಜಾನಪದ ಪರಿಷತ್ತು ಕೇರಳ ಘಟಕದ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ನಾಸಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಸಂಕಬೈಲು ಸತೀಶ್ ಅಡಪ, ಐ.ಎನ್.ಸಿ. ಮಂಜೇಶ್ವರ ಮಂಡಲ ಅಧ್ಯಕ್ಷ ಹನೀಫ್ ಪಡಿಬಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಬರಗೂರು ರಾಮಚಂದ್ರಪ್ಪರ ಕುರಿತು:
ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಸಂವರ್ಧನೆಗೆ ಅಪ್ರತಿಮ ಚಿಂತನೆ, ಸಂಘಟನೆ, ಬೋಧನೆಗಳ ಮೂಲಕ ಪ್ರಯತ್ನಿಸುತ್ತಾ ಬಂದಿರುವ ಪ್ರೊ. ಬರಗೂರು, ಎಪ್ಪತ್ತರ ದಶಕದ ಮಧ್ಯಭಾಗದಲ್ಲಿ ಬರವಣಿಗೆ ಆರಂಭಿಸಿ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃತಿ ರಚನೆ ಮಾಡಿರುವರು. ಕನ್ನಡ ಉಪನ್ಯಾಸಕರಾಗಿ ವೃತ್ತಿ ಘನತೆಯನ್ನು ಎತ್ತಿ ಹಿಡಿದ ಅವರು ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕನ್ನಡ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತರಾದರು. ಬಂಡಾಯ ಸಾಹಿತ್ಯ ಸಂಘಟನೆಯ ರಾಜ್ಯ ಸಂಚಾಲಕರಾಗಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕನ್ನಡವನ್ನು ಕಟ್ಟುವಲ್ಲಿ, ಭಾಷೆ ಸಾಹಿತ್ಯ ಕನ್ನಡ ಜನ ಮನವನ್ನು ಮುಟ್ಟುವಲ್ಲಿ ಪ್ರಧಾನ ಪಾತ್ರ ವಹಿಸಿದ್ದಾರೆ. ಪಂಪ ಪ್ರಶಸ್ತಿ, ನೃಪತುಂಗ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಚಲನಚಿತ್ರ ಕ್ಷೇತ್ರದಲ್ಲಿ ರಾಷ್ಟ್ರೀಯ ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಸರಳ ಸಜ್ಜನಿಕೆಯ ಈ ವ್ಯಕ್ತಿ ನಿಜವಾಗಿಯೂ ಕನ್ನಡದ ಶಕ್ತಿ. ಡಾ ವೆಂಕಟರಾಜ ಪುಣಿಂಚತ್ತಾಯರಂತಹ ಶೋಧಕರ ಹೆಸರಿನಲ್ಲಿ ನೀಡುವ ಪ್ರತಿಷ್ಠಿತ ಪ್ರಶಸ್ತಿಗೆ ಬೋಧಕ ಪ್ರೊ. ಬರಗೂರು ರಾಮಚಂದ್ರಪ್ಪ ಆಯ್ಕೆಯಾಗಿರುವುದು ಅವರ ಸಾಧನೆಗೆ ಸಂದ ಮಾನ್ಯತೆಯೆಂದು ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷರಾದ ಸಾಹಿತಿ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ
ಸಂಸ್ಥಾಪಕ ಎಸ್. ಪ್ರದೀಪ ಕುಮಾರ ಕಲ್ಕೂರ, ಪುವೆಂಪು ಪ್ರತಿಷ್ಠಾನದ ಅಧ್ಯಕ್ಷ ಕುಂಟಾರು ರವಿಶ ತಂತ್ರಿ, ಕೆ.ತೇಜೋಮಯ, ಸಯ್ಯದ್ ಯು.ಕೆ. ಸೈಫುಲ್ಲ ತಂಗಳ್ ಉದ್ಯಾವರ, ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಪುವೆಂಪು ಪ್ರತಿಷ್ಠಾನದ ಸಂಚಾಲಕ ರವಿ ನಾಯ್ಕಾಪು, ಅರಿಬೈಲು ಗೋಪಾಲ ಶೆಟ್ಟಿ, ವಿಜಯರಾಜ ಪುಣಿಂಚತ್ತಾಯ ಮತ್ತಿತರರು ಉಪಸ್ಥಿತರಿದ್ದರು.

Advt
error: Content is protected !!