“ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಎಲ್ಲರೂ ಜಾತಿ, ಪಕ್ಷ, ಮತ ಬೇಧ ಮರೆತು ಒಗ್ಗೂಡಬೇಕು“ -ಸಚಿವ ಲಕ್ಷ್ಮಣ ಸವದಿ

ಮಂಗಳೂರು: ರಾಜ್ಯಮಟ್ಟದ 73ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಶುಕ್ರವಾರ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾಡಿದ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು, “ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಮಾಜದ ಮೇಲೆ ಇಟ್ಟಿರುವ ಅಚಲವಾದ ನಂಬಿಕೆ, ಪ್ರೀತಿ ಮತ್ತು ಕಾಳಜಿಯಿಂದಾಗಿ ಇಂದು ಸಹಕಾರ ಕ್ಷೇತ್ರ ಶ್ರೀಮಂತವಾಗಿದೆ. ಬಸವಣ್ಣ 12ನೇ ಶತಮಾನದಲ್ಲಿ ಹೇಳಿದಂತೆ ಇವ ನಮ್ಮವ ಎನ್ನುವ ಉಕ್ತಿಗೆ ಉದಾಹರಣೆ ಎಂದರೆ ಅದು ನಮ್ಮ ನಿಮ್ಮೆಲ್ಲರ ನೆಚ್ಚಿನ ರಾಜೇಂದ್ರ ಕುಮಾರ್ ಅವರು. ಲಕ್ಷಾಂತರ ತಾಯಂದಿರಿಗೆ, ಸ್ವಸಹಾಯ ಸಂಘಗಳಿಗೆ ಬೆಂಬಲ ನೀಡುತ್ತಿರುವ ಇವರು ಮನೆಯ ಮಗನಂತೆ ಇಡೀ ಮನೆಯನ್ನು ಸಲಹುತ್ತಿದ್ದಾರೆ. ಸಹಕಾರ ಕ್ಷೇತ್ರಕ್ಕೆ ಶಕ್ತಿಯನ್ನು ತುಂಬುತ್ತಿರುವ ಇವರಿಂದಾಗಿ ಈ ಭಾಗದ ಸಹಕಾರಿ ಕ್ಷೇತ್ರಗಳು ಯಶಸ್ವಿಯಾಗಿ ನಡೆಯುತ್ತಿವೆ. ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಎಲ್ಲರೂ ಜಾತಿ, ಪಕ್ಷ, ಮತ ಬೇಧ ಮರೆತು ಒಗ್ಗೂಡಬೇಕು“ ಎಂದು ಕರೆ ನೀಡಿದರು.


ರಾಜ್ಯ ಆರೋಗ್ಯ ಸಚಿವ ಯು.ಟಿ.ಖಾದರ್ ಮಾತಾಡಿ, ”ಮಹಿಳೆಯರು, ರೈತರಿಗೆ ನೆಮ್ಮದಿ ಮತ್ತು ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಹಕಾರಿ ಕ್ಷೇತ್ರ ಕೊಟ್ಟ ಕೊಡುಗೆ ಅಪಾರವಾದುದು. ಇಡೀ ವಿಶ್ವಕ್ಕೆ ಕರಾವಳಿಯ ಮಹಿಳೆಯರು ಸ್ವಾವಲಂಬನೆಯ ಪಾಠ ಕಲಿಸಿಕೊಟ್ಟಿದ್ದಾರೆ. ಇದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಯುವಜನಾಂಗ ಇನ್ನಷ್ಟು ಹೆಚ್ಚು ಸಕ್ರಿಯವಾಗಿ ಸಹಕಾರಿ ಕ್ಷೇತ್ರದಲ್ಲಿ ಪಾಲ್ಗೊಳ್ಳುವ ಮೂಲಕ ಅಭಿವೃದ್ಧಿಗೆ ಪಣತೊಡಬೇಕು. ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ದೂರದರ್ಶಿತ್ವ ಮತ್ತು ದಿಟ್ಟ ನಾಯಕತ್ವಕ್ಕೆ ನಾವೆಲ್ಲರೂ ಅಭಿನಂದನೆಯನ್ನು ಸಲ್ಲಿಸಬೇಕು“ ಎಂದರು.


ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾತಾಡಿ, ”ಮಹಿಳೆಯರು ತಮ್ಮ ಮಕ್ಕಳನ್ನು ವಿದ್ಯಾಭ್ಯಾಸ ಕೊಟ್ಟು ಸಮಾಜದಲ್ಲಿ ಸುಶಿಕ್ಷಿತರನ್ನಾಗಿ ಮಾಡಬೇಕು. ಸ್ವಾವಲಂಬನೆಯಿಂದ ಬದುಕಿ ಇತರರಿಗೆ ಮಾದರಿಯಾಗಬೇಕು. ಮುಂದಿನ ದಿನಗಳಲ್ಲಿ ಸ್ವಸಹಾಯ ಸಂಘದ ಎಲ್ಲ ಮಹಿಳಾ ಸದಸ್ಯರಿಗೂ ಉಚಿತ ಸಮವಸ್ತ್ರ ನೀಡುತ್ತೇನೆ“ ಎಂದರು.


ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ. ದೇವೇಗೌಡ ಅವರು ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ‘ಸಹಕಾರ ಮಾಣಿಕ್ಯ ಪ್ರಶಸ್ತಿ’, ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಹಾಗೂ ಉತ್ತಮ ಸ್ವಸಹಾಯ ಸಂಘಗಳಿಗೆ ಪುರಸ್ಕಾರಗಳನ್ನು ಜಿ.ಟಿ. ದೇವೇಗೌಡ ಅವರು ಪ್ರದಾನ ಮಾಡಿದರು.

ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷಜಿ.ಟಿ. ದೇವೇಗೌಡ ಮಾತನಾಡಿ, ಸಹಕಾರಿ ಕ್ಷೇತ್ರದ ಮೂಲಕ ಸಮಾಜದ ಯುವಕರು ಸೇರಿದಂತೆ ಎಲ್ಲಾ ವರ್ಗದವರಿಗೆ ನೆರವು ನೀಡಲು ಸರಕಾರದ ಬೆಂಬಲವೂ ಅಗತ್ಯ ಎಂದರು.

 

“ಸಹಕಾರ ಮಾಣಿಕ್ಯ ಪ್ರಶಸ್ತಿ”ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ, ಉತ್ತಮ ಸ್ವ-ಸಹಾಯ ಸಂಘಗಳಿಗೆ ಪುರಸ್ಕಾರವನ್ನು ಶಾಸಕ ಹಾಗೂ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ ನೆರವೇರಿಸಿದರು.

 

ಮುಖ್ಯ ಅತಿಥಿಗಳಾಗಿದ್ದ ಸಂಸದ ಕ್ಯಾಬ್ರಿಜೇಶ್ ಚೌಟ ಮಾತನಾಡಿ, ತ್ರಿಭುವನ್ ಸಹಕಾರಿ ವಿಶ್ವ ವಿದ್ಯಾನಿಲಯದ ಘಟಕವನ್ನು ಮಂಗಳೂರಿನಲ್ಲಿ ಆರಂಭಿಸಬೇಕು, ಅಡಿಕೆ ಹಳದಿ ರೋಗ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್ ಸರಕಾರದಿಂದ ನೀಡಬೇಕು ಎಂದು ಆಗ್ರಹಿಸಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಶುಭ ಹಾರೈಸಿದರು.

ಸಹಕಾರ ಸಪ್ತಾಹದ ಧ್ವಜಾರೋಹಣವನ್ನು ಶಾಸಕ ಡಿ.ವೇದವ್ಯಾಸ ಕಾಮತ್‌ ನೆರವೇರಿಸಿದರು.
ಸಮಾರಂಭದಲ್ಲಿ ಶಾಸಕರಾದ ಯಶ್ಪಾಲ್ ಎ. ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಕಿಶೋರ್ ಕುಮಾರ್ ಬೊಟ್ಯಾಡಿ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ಇತರ ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಇದರ ವ್ಯವಸ್ಥಾಪಕ ನಿರ್ದೇಶಕ ಡಾ.ಸುರೇಶ್ ಗೌಡ, ಮೈಸೂರು ಸಹಕಾರ ಸಂಘಗಳ ಜಂಟಿ ನಿಬಂಧಕ ಶಶಿಧರ್ ಪಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಜಂಟಿ ನಿಬಂಧಕ ಕೆ.ಎಸ್.ನವೀನ್, ದಕ್ಷಿಣ ಕನ್ನಡ ಜಿಲ್ಲೆ ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧ ಕಲಾವಣ್ಯ ಕೆ.ಆ‌ರ್, ಸಹಕಾರ ಸಂಘಗಳ ಅಪರ ನಿಬಂಧಕ ಪ್ರಸಾದ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟ ಇಂದ್ರಾಳಿ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್, ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಯ ನಿರ್ದೇಶಕ ಐಕಳ ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಗೊಟ್ಟು ವಂದಿಸಿದರು. ನಿತೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

error: Content is protected !!